‘ಈಶ್ವರ’ ಎಂದ ಕೂಡಲೇ ಪರಮಾತ್ಮನನ್ನೆ ನೆನಪಿಸಿಕೊಳ್ಳೋ ನಮಗೆ ಅದೇ ಹೆಸರಿನಲ್ಲಿ ದಿವ್ಯೌಷಧಿ ಇದೆ ಎಂಬುದು ಎಷ್ಟು ಜನರಿಗೆ ತಿಳಿದೀತು? ಹೌದು! ಪರಮಾತ್ಮನ ಹೆಸರಿನಲ್ಲೇ ಒಂದು ಗಿಡಮೂಲಿಕೆ ಇದೆ (Indian birthwort). ಇದರ ವಿಶೇಷತೆ ಏನು? ಅದರಿಂದಾಗುವ ಪ್ರಯೋಜನಗಳೇನು? ಆರೋಗ್ಯದ ಮೇಲೆ ಬೀರುವ ಪ್ರಬಾವಗಳೇನು? ಎಂಬುದನ್ನು ಈ ಲೇಖನದಲ್ಲಿ ತಿಳಿಯೋಣ. ಈ ಬಳ್ಳಿಯನ್ನು ಹೆಚ್ಚಾಗಿ ಭಾರತ, ನೇಪಾಳ, ಶ್ರೀಲಂಕಾ ಮತ್ತು ಬಾಂಗ್ಲಾದೇಶಗಳಲ್ಲಿ ಕಾಣಬಹುದಾಗಿದೆ. ಇದರ ವೈಜ್ಞಾನಿಕ ಹೆಸರು ಅರಿಸ್ಟೋಲೋಚಿಯ ಇಂಡಿಕಾ. ಸಾಮಾನ್ಯವಾಗಿ ಮೂಲಿಕೆ ಮರಕ್ಕೆ ಸುತ್ತಿಕೊಂಡು ಬೆಳೆಯುವ ಕಪ್ಪು […]
‘ಈಶ್ವರ’ ಎಂದ ಕೂಡಲೇ ಪರಮಾತ್ಮನನ್ನೆ ನೆನಪಿಸಿಕೊಳ್ಳೋ ನಮಗೆ ಅದೇ ಹೆಸರಿನಲ್ಲಿ ದಿವ್ಯೌಷಧಿ ಇದೆ ಎಂಬುದು ಎಷ್ಟು ಜನರಿಗೆ ತಿಳಿದೀತು? ಹೌದು! ಪರಮಾತ್ಮನ ಹೆಸರಿನಲ್ಲೇ ಒಂದು ಗಿಡಮೂಲಿಕೆ ಇದೆ (Indian birthwort). ಇದರ ವಿಶೇಷತೆ ಏನು? ಅದರಿಂದಾಗುವ ಪ್ರಯೋಜನಗಳೇನು? ಆರೋಗ್ಯದ ಮೇಲೆ ಬೀರುವ ಪ್ರಬಾವಗಳೇನು? ಎಂಬುದನ್ನು ಈ ಲೇಖನದಲ್ಲಿ ತಿಳಿಯೋಣ.
ಈ ಬಳ್ಳಿಯನ್ನು ಹೆಚ್ಚಾಗಿ ಭಾರತ, ನೇಪಾಳ, ಶ್ರೀಲಂಕಾ ಮತ್ತು ಬಾಂಗ್ಲಾದೇಶಗಳಲ್ಲಿ ಕಾಣಬಹುದಾಗಿದೆ. ಇದರ ವೈಜ್ಞಾನಿಕ ಹೆಸರು ಅರಿಸ್ಟೋಲೋಚಿಯ ಇಂಡಿಕಾ. ಸಾಮಾನ್ಯವಾಗಿ ಮೂಲಿಕೆ ಮರಕ್ಕೆ ಸುತ್ತಿಕೊಂಡು ಬೆಳೆಯುವ ಕಪ್ಪು ಬಳ್ಳಿಯಾಗಿದ್ದು, ಇದರ ಎಲೆಗಳು ಉದ್ದವಾಗಿ, ತಳದಲ್ಲಿ ಅಗಲವಾಗಿ, ತುದಿಯಲ್ಲಿ ಮೊನಚಾಗಿ, ಮೃದುವಾಗಿರುತ್ತದೆ. ಇನ್ನೂ ಇದರ ಬೀಜಗಳು ಚಪ್ಪಟೆಯಾಗಿ, ಅಂಡಕಾರವಾಗಿದ್ದು ಪುಕ್ಕಗಳನ್ನು ಹೊಂದಿದೆ ಹಾಗು ಇದರ ಬೇರುಗಳಲ್ಲಿ ಸುಗಂಧ ತೈಲವಿರುತ್ತದೆ.
ಈಶ್ವರ ಬಳ್ಳಿ (Indian birthwort)ಯ ಪೌರಾಣಿಕ ಹಿನ್ನೆಲೆ:
ನಮ್ಮೆಲ್ಲರಿಗೂ ತಿಳಿದಂತೆ ಶಿವ ಸಮುದ್ರ ಮಂಥನ ಮಾಡುವಾಗ ಹಾಲಾಹಲ (ವಿಷ) ಉತ್ಪತ್ತಿಯಾಯಿತು. ಆ ವಿಷ ಯಾರಿಗೂ ತೊಂದರೆಯಾಗಬಾರದೆಂದು ತಾನೇ ಅದನ್ನು ಕುಡಿದ. ಇದನ್ನು ನೋಡಿದ ಪಾರ್ವತಿ ದೇವಿ ಆ ವಿಷ ತನ್ನ ಪತಿಯ ಹೊಟ್ಟೆ ಸೇರಬಾರದೆಂದು ಆತನ ಕುತ್ತಿಗೆಯನ್ನು ಒತ್ತಿ ಹಿಡಿದಳು. ವಿಷ ಒಳ ಹೋಗಲಿಲ್ಲ. ವಿಷದ ಪ್ರಭಾವದಿಂದ ಕುತ್ತಿಗೆ ನೀಲ ವರ್ಣವಾಯಿತು. ಶಿವ ನೀಲಕಂಠನಾದ. ಶಿವ ವಿಷ ಕುಡಿದರೂ ಶಿವನಿಗೆ ಏನೂ ಆಗಲಿಲ್ಲ. ವಿಷವನ್ನು ನಿರ್ವಿಷ ಮಾಡುವ ಗುಣ ಶಿವನಿಗಿದ್ದಂತೆ ಈ ಗಿಡಕ್ಕೂ ಇರುವ ಕಾರಣ ‘ಈಶ್ವರ’ ಎಂಬ ಹೆಸರು ಈ ವನಸ್ಪತಿಗೆ ಇಟ್ಟಿದ್ದಾರೆ.
ಇದನ್ನೂ ಓದಿ: ಓಂಶಕ್ತಿ ಮಾಲಾಧಾರಿಗಳ ಮೇಲೆ ಕಲ್ಲು ತೂರಾಟ
‘ಈಶ್ವರ’ ಬಳ್ಳಿ ಮತ್ತು ಅದರ ಫಲ ನೋಡಲು ಹೇಗಿರುತ್ತದೆ?
ಕೆಲ ‘ಈಶ್ವರ’ ಬಳ್ಳಿಯು ಮರದಂತೆ ಉದ್ದಕ್ಕೆ ಏರುತ್ತದೆ. ಮತ್ತಷ್ಟು ಬಳ್ಳಿಯು ಪೊದೆಯಾಗಿ ಆವರಿಸಿಕೊಳ್ಳುತ್ತದೆ. ಸ್ವಲ್ಪ ಉದ್ದ ಆಯತಾಕಾರದ ಎಲೆಗಳು. ಎಲೆಗಳು ಅಲ್ಲಾಡಿದರೆ ಪರಿಮಳ ಸೂಸುತ್ತದೆ. ಎಲೆಯನ್ನು ಕಿವಿಚಿದರೂ ಪರಿಮಳ ಬರುತ್ತದೆ. ಹೂಗಳು ಬಾಯಿ ತೆರೆದ ಹಕ್ಕಿಗಳಂತೆ ಕಂಡುಬರುತ್ತದೆ. ಫಲಗಳು ಉದ್ದ ಹಾಗೂ ಸ್ವಲ್ಪ ದುಂಡಾಗಿ ಇರುತ್ತದೆ. ಫಲ ಬೆಳೆದು ಒಡೆದಾಗ ತಲೆ ಕೆಳಗಾಗಿ ಬಿಡಿಸಿದ ಪ್ಯಾರಾಚೂಟ್‌ನಂತೆ ಕಾಣುತ್ತದೆ. ಅದರೊಳಗೆ ತೆಳುವಾದ ತ್ರಿಕೋಣಾಕಾರದ ಬೀಜಗಳು ಇರುತ್ತದೆ.
‘ಈಶ್ವರ’ ಬಳ್ಳಿ (Indian birthwort)ಯಿಂದ ಆಗುವ ಪ್ರಯೋಜನಗಳೇನು?
ಭಾರತದ ಎಲ್ಲಾ ಕಡೆ ಕಂಡು ಬರುವ ಈಶ್ವರ ಬಳ್ಳಿಯ ಬೇರು, ಎಲೆಗಳು ಔಷಧಿಗಾಗಿ ಉಪಯೋಗಿಸಲ್ಪಡುತ್ತದೆ. ಕ್ರಿಮಿ ಬಾಧೆ, ಕಫ ಬಾಧೆ, ಸ್ತ್ರೀಯರ ಕೆಲವು ತೊಂದರೆಗಳಲ್ಲಿ, ವಿಷ ಚಿಕಿತ್ಸೆಯಲ್ಲಿ ವಿಶೇಷವಾಗಿ ಇದನ್ನು ಉಪಯೋಗಿಸಲ್ಪಡುತ್ತದೆ.
ಜೇಡ, ಚೇಳು, ಇಲಿ ಕಚ್ಚಿದರೆ: ಇದರ 3ಗ್ರಾಂ ಬೇರನ್ನು ಅಕ್ಕಿ ತೊಳೆದ ನೀರಲ್ಲಿ ಕಲಸಿ ಕುಡಿಸಬೇಕು ಹಾಗೂ ಅದರ ಎಲೆಯನ್ನು ನೀರಲ್ಲಿ ಅರೆದು ಕಚ್ಚಿದಲ್ಲಿಗೆ ಲೇಪಿಸಬೇಕು.
ತಲೆ ನೋವಿಗೆ ರಾಮಬಾಣ: ಈಶ್ವರ ಬಳ್ಳಿಯ ಎಲೆಯಲ್ಲಿ 10 ಗ್ರಾಂ ರಸ ತೆಗೆದು, 3ಗ್ರಾಂ ಅರಿಶಿನ ಪುಡಿ ಸೇರಿಸಿ ಕುಡಿಯುವುದರಿಂದ ತಲೆನೋವು ಶೀಘ್ರವಾಗಿ ಕಡಿಮೆಯಾಗುತ್ತದೆ.
ಗಂಟುನೋವು, ಬಿಳಿ ಮಚ್ಚೆಗಳು: ಈ ಎಲೆಯನ್ನು ನೀರಲ್ಲಿ ಅರೆದು ಗಂಟುನೋವು ಅಥವಾ ಬಿಳಿ ಮಚ್ಚೆಗಳ ಮೇಲೆ ಹಚ್ಚುತ್ತ ಬಂದರೆ ಕ್ರಮೇಣ ವಾಸಿಯಾಗುತ್ತದೆ.
ಕೆಮ್ಮು ಕಫಕ್ಕೆ ಔಷಧಿ: ಇದರ ಎಲೆಯ ಜ್ಯೂಸ್ ತೆಗೆದು 15 ಎಂಎಲ್ ನಷ್ಟು ಕುಡಿಸುವುದರಿಂದ ಕಡಿಮೆಯಾಗುವುದು. ಕೆಲವೊಮ್ಮೆ ಈ ಎಲೆಯ ಜ್ಯೂಸ್ ಕುಡಿದ ಸ್ವಲ್ಪ ಹೊತ್ತಿನಲ್ಲಿ ಕಫ ವಾಂತಿಯಾಗಿ ಕರಗಿ ಹೋಗುತ್ತದೆ. ಕಫ ಜಾಸ್ತಿ ಇರುವಾಗ ಸಾಮಾನ್ಯವಾಗಿ ಅಮೃತಾಂಜನ, ವಿಕ್ಸ್ ಎದೆಗೆ ಹಚ್ಚುತ್ತಾರೆ. ಅದೇ ರೀತಿ ಎಲೆಯನ್ನು ಅರೆದು ಎದೆಗೆ ಹಚ್ಚಬಹುದು.
ಮುಟ್ಟಿನ ದೋಷ ನಿವಾರಣೆ: ಹೆಣ್ಣುಮಕ್ಕಳ ಋತುಚಕ್ರದ ವೇಳೆ ಕಾಣಿಸಿಕೊಳ್ಳುವ ಹೊಟ್ಟೆನೋವಿಗೆ 10ಗ್ರಾಂ ಈಶ್ವರ ಬೇರಿನ ಕಷಾಯ ಮಾಡಿ (30 ರಿಂದ 40 ಎಂ.ಎಲ್) ಕುಡಿಸಬೇಕು.
ಹೊಟ್ಟೆ ಕ್ರಿಮಿ ಬಾಧೆ: 5-10 ಮಿಲಿ ಎಲೆರಸವನ್ನು 3 ದಿನ ಕುಡಿಯುವುದರಿಂದ ಕಡಿಮೆಯಾಗುವುದು.
ಜ್ವರಕ್ಕೆ ದಿವ್ಯೌಷಧಿ: 5 ಗ್ರಾಂ ಈಶ್ವರ ಬೇರನ್ನು ಕಷಾಯ ಮಾಡಿ ಅದಕ್ಕೆ 1/2 ಚಮಚ ಕಾಳು ಮೆಣಸು ಪುಡಿ ಸೇರಿಸಿ ಕುಡಿಯುವುದರಿಂದ ಕಡಿಮೆಯಾಗುವುದು. ಶರೀರ ಬಿಸಿ ಆಗಿ ಚಳಿಯಿಂದ ಕೂಡಿದ ಜ್ವರವಿದ್ದರೆ ಈಶ್ವರ ಬೇರಿನ ಕಷಾಯದೊಂದಿಗೆ ಈಶ್ವರ ಬೇರಿನ ಎಲೆ ರಸಕ್ಕೆ ಹಿಪ್ಪಿಯನ್ನು ಪುಡಿಮಾಡಿ ಸೇರಿಸಿ ಕುಡಿಯುವುದರಿಂದ ಕಡಿಮೆಯಾಗುವುದು.
ಸರ್ಪ ಸುತ್ತಿಗೆ ರಾಮಬಾಣ: ಇತ್ತೀಚೆಗೆ ಸರ್ಪ ಸುತ್ತಿಗೆ ಅನೇಕ ಔಷಧಿಗಳಿದ್ದರು ಈಶ್ವರ ಬೇರು ಮತ್ತು ನೀಲಿ ಸೊಪ್ಪನ್ನು ಸೇರಿಸಿ ಅರೆದು ಹಚ್ಚುವುದರಿಂದ ಉರಿ ನೋವು ಕಡಿಮೆಯಾಗುವುದು.
ದೃಷ್ಟಿ ದೋಷ ನಿವಾರಣೆ: ಇದರ ಬೇರನ್ನು ನಯವಾಗಿ ಚೂರ್ಣಮಾಡಿ ಅದಕ್ಕೆ ಅಪ್ಪಟ ಗೋರೋಜನ ಮತ್ತು ಚಂದನ ಸೇರಿಸಿ ತಿಲಕವಿಟ್ಟರೆ ದೃಷ್ಟಿ ದೋಷ ಪರಿಹಾರವಾಗುತ್ತದೆ.
ಮಲಬದ್ಧತೆ ಮತ್ತು ಮೂಲವ್ಯಾಧಿ ನಿವಾರಣೆ: ಈಶ್ವರಿಬೇರು, ಹಾವು ಮೆಕ್ಕೆ ಬೇರು ದಂತಿ, ತಿಗಡೆ ಕೊಮ್ಮೆ ಬೇರು, ಅಳಲೆಕಾಯಿ ಸಿಪ್ಪೆ, ಹಿಪ್ಪಲಿ ಇವುಗಳೆಲ್ಲವನ್ನು ಸಮತೂಕದಲ್ಲಿ ನಯವಾಗಿ ಚೂರ್ಣಿಸಬೇಕು. ನಂತರ 2 ರಿಂದ 2.5 ಗ್ರಾಂ ಚೂರ್ಣವನ್ನು ಸೇವಿಸಿ ಬಿಸಿನೀರು ಕುಡಿದರೆ ಮಲಬದ್ಧತೆ ಮತ್ತು ಮೂಲವ್ಯಾದಿ ನಿವಾರಣೆಯಾಗುತ್ತದೆ.
ಹೀಗೆ ಈಶ್ವರ ಬೇರು (Indian birthwort) ಮತ್ತು ಅದರ ಎಲೆಯಲ್ಲಿ ಅಡಗಿರುವ ದಿವ್ಯೌಷಧಿ ಅಪಾರ. ಅದರಲ್ಲಿ ತೀಕ್ಷ ಗುಣಗಳುಳ್ಳ ಮದ್ದಾಗಿದ್ದು, ಅನೇಕ ಕಾಯಿಲೆಗಳಿಗೆ ರಾಮಬಾಣವಾಗಿದೆ. ಯಾವುದೇ ಔಷಧಿಯಾದರು ಉಪಯೋಗಿಸು ಮುನ್ನ ಒಮ್ಮೆ ತಜ್ಞ ವೈದ್ಯರ ಸಲಹೆ ಪಡೆಯುವುದು ಸೂಕ್ತ.
Previous Article
ಬಳ್ಳಾರಿ ಗಲಾಟೆ ಕೇಸ್ : ಸಿಐಡಿ, ನ್ಯಾಯಾಂಗ ತನಿಖೆ ಬಗ್ಗೆ ನಾಳೆ ತೀರ್ಮಾನ-ಸಿಎಂ ಸಿದ್ದರಾಮಯ್ಯ
Next Article
ಕೊಲಂಬಿಯಾ, ಕ್ಯೂಬಾ, ಮೆಕ್ಸಿಕೊ, ಗ್ರೀನ್‌ಲ್ಯಾಂಡ್‌ಗೂ ಟ್ರಂಪ್ ಬೆದರಿಕೆ