ಬೆಂಗಳೂರು ಜನವರಿ,3,2026 (www.justkannada.in) : ಕೇಂದ್ರದಲ್ಲಿರುವ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಹಳ್ಳಿ ಅಧಿಕಾರ ಕಸಿದುಕೊಂಡು, ಗ್ರಾಮೀಣ ಆರ್ಥಿಕತೆಯನ್ನು ನಾಶ ಪಡಿಸಲು ಮುಂದಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು. ಗೃಹ ಕಚೇರಿ ಕೃಷ್ಣಾದಲ್ಲಿ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ರದ್ಧತಿ ಕುರಿತು ಪತ್ರಿಕಾಗೋಷ್ಠಿಯಲ್ಲಿಮಾತನಾಡಿದ ಸಿಎಂ ಸಿದ್ದರಾಮಯ್ಯ, ಮೋದಿ ಸರ್ಕಾರ ಮಹಾತ್ಮಾ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯನ್ನು ಹಿಂಪಡೆಯುವ ಮೂಲಕ ವಿಬಿ ಜಿ ರಾಮ್ ಜಿ ಹೆಸರಿನಲ್ಲಿ ಹೊಸ ಕಾಯ್ದೆ ಜಾರಿಗೆ […]
The post ಹಳ್ಳಿ ಅಧಿಕಾರ ಕಸಿದುಕೊಂಡು ಗ್ರಾಮೀಣ ಆರ್ಥಿಕತೆ ನಾಶಕ್ಕೆ ಮುಂದಾದ ಮೋದಿ ಸರ್ಕಾರ- ಸಿಎಂ ಸಿದ್ದರಾಮಯ್ಯ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.
ಬೆಂಗಳೂರು ಜನವರಿ,3,2026 (www.justkannada.in) : ಕೇಂದ್ರದಲ್ಲಿರುವ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಹಳ್ಳಿ ಅಧಿಕಾರ ಕಸಿದುಕೊಂಡು, ಗ್ರಾಮೀಣ ಆರ್ಥಿಕತೆಯನ್ನು ನಾಶ ಪಡಿಸಲು ಮುಂದಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು.
ಗೃಹ ಕಚೇರಿ ಕೃಷ್ಣಾದಲ್ಲಿ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ರದ್ಧತಿ ಕುರಿತು ಪತ್ರಿಕಾಗೋಷ್ಠಿಯಲ್ಲಿಮಾತನಾಡಿದ ಸಿಎಂ ಸಿದ್ದರಾಮಯ್ಯ, ಮೋದಿ ಸರ್ಕಾರ ಮಹಾತ್ಮಾ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯನ್ನು ಹಿಂಪಡೆಯುವ ಮೂಲಕ ವಿಬಿ ಜಿ ರಾಮ್ ಜಿ ಹೆಸರಿನಲ್ಲಿ ಹೊಸ ಕಾಯ್ದೆ ಜಾರಿಗೆ ತರುವಾಗ, ರಾಜ್ಯ ಸರ್ಕಾರಗಳ ಅಭಿಪ್ರಾಯ ಕೇಳಿಲ್ಲ. ಭಾರತೀಯರ ಅಭಿಪ್ರಾಯ ಪಡೆಯದೆ ನೇರವಾಗಿ ಹೊಸ ಕಾಯ್ದೆ ಜಾರಿಗೊಳಿಸುವ ಮೂಲಕ ಸರ್ವಾಧಿಕಾರಿ ಧೋರಣೆಯನ್ನು ಪ್ರದರ್ಶಿಸಿದೆ ಎಂದರು.
ಮನಮೋಹನ ಸಿಂಗ್ ಅವರ ನೇತೃತ್ವದ ಯುಪಿಎ ಸರ್ಕಾರ ಉದ್ಯೋಗದ ಹಕ್ಕು, ಮಾಹಿತಿ ಹಕ್ಕು, ಶೈಕ್ಷಣಿಕ ಹಕ್ಕು ಮೊದಲಾದ ಕ್ರಾಂತಿಕಾರಿ ಯೋಜನೆಗಳನ್ನು ಜಾರಿಗೊಳಿಸುವ ಮೂಲಕ ಜನರಿಗೆ ಹೆಚ್ಚಿನ ಅಧಿಕಾರವನ್ನು ನೀಡುವ ಕಾರ್ಯವನ್ನು ಮಾಡಿತ್ತು. ಮೋದಿ ಸರ್ಕಾರ ಡಿಸೆಂಬರ್ 17ರಂದು ಕಾಯ್ದೆಯನ್ನು ಸಂಸತ್ತಿನಲ್ಲಿ ಮಂಡಿಸಿ ಡಿ.18ರಂದು ಅಂಗೀಕಾರ ಪಡೆದಿದೆ. ಸುಮಾರು 12.16 ಕೋಟಿ ನರೇಗಾ ಕಾರ್ಮಿಕರು ದೇಶದಲ್ಲಿದ್ದಾರೆ. ಅದರಲ್ಲಿ 6.21 ಕೋಟಿ ಮಹಿಳೆಯರು ಇದ್ದಾರೆ. ಪ.ಜಾತಿಯವರು ಶೇ.17, ಪ.ವರ್ಗ ಶೇ. 11 ಇದ್ದಾರೆ. ನಮ್ಮ ರಾಜ್ಯದಲ್ಲಿ 71.18 ಲಕ್ಷ ನರೇಗಾ ಕಾರ್ಮಿಕರಿದ್ದಾರೆ. ಇದರಲ್ಲಿ 36.75 ಲಕ್ಷ ಮಹಿಳೆಯರು, ಅಂದರೆ ಶೇ. 51.6 ಮಹಿಳೆಯರಿದ್ದಾರೆ ಎಂದು ವಿವರಿಸಿದರು.
ಮನಮೋಹನ್ ಸಿಂಗ್ ಅವರ ಜನಪರ ಕಾಯ್ದೆಯನ್ನು ಹಿಂಪಡೆದುಕೊಳ್ಳುವ ಮೂಲಕ ಕಾರ್ಪೊರೇಟ್ ಕಂಪೆನಿಗಳಿಗೆ ಲಾಭ ಮಾಡಿಕೊಡುವ ಕೆಲಸವನ್ನು ಮೋದಿ ಸರ್ಕಾರ ಮಾಡುತ್ತಿದೆ. ನರೇಗಾ ಕಾಯ್ದೆ ಪ್ರಕಾರ ಜನಸಾಮಾನ್ಯರು, ಕೂಲಿ ಕಾರ್ಮಿಕರು, ಕೃಷಿ ಕಾರ್ಯಗಳ ಜೊತೆಯಲ್ಲಿ ತಾವಿದ್ದ ಸ್ಥಳದಲ್ಲೇ ನರೇಗಾ ಅಡಿ ಕೂಲಿ ಕೆಲಸ ಮಾಡಲು ಅವಕಾಶವಿತ್ತು. ಆ ಮೂಲಕ ಹಳ್ಳಿಗಾಡಿನ ಆರ್ಥಿಕತೆ ಕಟ್ಟಲು ಸಾಧ್ಯವಾಗಿತ್ತು. ಸ್ಥಳೀಯವಾಗಿ ಆಸ್ತಿ ಸೃಜನೆಯಾಗುತ್ತಿತ್ತು. ಉದ್ಯೋಗ ಕೇಳಿ ಪಡೆಯುವ ಹಕ್ಕು ಜನರಿಗಿತ್ತು. ಈಗ ಇದ್ಯಾವುದೂ ಇಲ್ಲವಾಗಿದೆ ಎಂದರು.
ಕಳೆದ 11 ವರ್ಷಗಳ ಕೇಂದ್ರ ಸರ್ಕಾರದ ಸಾಧನೆ ಅಂದರೆ ಯೋಜನೆಗಳ ಹೆಸರು ಬದಲಾಯಿಸಿರುವುದು ಮಾತ್ರ. ಹಿಂದೆ ಜಾರಿಯಲ್ಲಿದ್ದ ಸುಮಾರು 30 ಯೋಜನೆಗಳ ಹೆಸರು ಬದಲಾವಣೆ ಅಥವಾ ಕಾಯ್ದೆಗಳನ್ನು ಹಿಂತೆಗೆದುಕೊಳ್ಳುವ ಕಾರ್ಯವನ್ನು ಮೋದಿ ಸರ್ಕಾರ ಮಾಡಿದೆ. ಪ್ರಸ್ತುತ ಕಾಯ್ದೆಯಡಿ 100 ದಿನ ಕನಿಷ್ಟ ಕೆಲಸ ನೀಡಬೇಕಾಗಿತ್ತು. ಅವರು ಎಲ್ಲಿ ವಾಸಿಸುತ್ತಾರೋ ಅಲ್ಲಿಯೇ ಕೆಲಸ ನೀಡಬೇಕಾಗಿತ್ತು. ಈಗ ಹೊಸ ಕಾಯ್ದೆ ಸೆಕ್ಷನ್ 5(1) ಪ್ರಕಾರ ಸರ್ಕಾರ ಅಧಿಸೂಚಿತ ಪ್ರದೇಶದಲ್ಲಿ ಮಾತ್ರ ಉದ್ಯೋಗ ನೀಡಲಾಗುತ್ತದೆ. ಉದ್ಯೋಗ ದೊರೆಯುವ ಬಗ್ಗೆ ಯಾವುದೇ ಗ್ರಾಮ ಪಂಚಾಯತ್ ಗಳಿಗೂ ಖಾತ್ರಿಯಿರುವುದಿಲ್ಲ ಎಂದರು.
ವರ್ಷದ ಯಾವುದೇ ಅವಧಿಯಲ್ಲಿ ಲಭ್ಯವಾಗುತ್ತಿದ್ದ ಕೂಲಿ ಕೆಲಸವನ್ನು ಈಗ ನಿರ್ಬಂಧಿಸಲಾಗಿದ್ದು, ಕೃಷಿ ಚಟುವಟಿಕೆ ಅವಧಿಯ 60 ದಿನ ಯೋಜನೆಯಡಿ ಯಾವುದೇ ಉದ್ಯೋಗ ನೀಡಲಾಗುವುದಿಲ್ಲ. ಹಣದುಬ್ಬರಕ್ಕೆ ತಕ್ಕಂತೆ ಕೂಲಿ ಹಣವನ್ನು ಸರಿದೂಗಿಸುವ ಅವಕಾಶವನ್ನು ತೆಗೆದು ಹಾಕಲಾಗಿದೆ. ಹಿಂದಿನ ಕಾಯ್ದೆ ಪ್ರಕಾರ ಕೇಂದ್ರ ಸರ್ಕಾರ ಪೂರ್ಣ ಅನುದಾನವನ್ನು ಭರಿಸುತ್ತಿತ್ತು. ಹೊಸ ಕಾಯ್ದೆ ಪ್ರಕಾರ ಶೇ.60 ರಷ್ಟು ಕೇಂದ್ರ ಹಾಗೂ ಶೇ.40ರಷ್ಟು ರಾಜ್ಯ ಸರ್ಕಾರ ಭರಿಸಲಿದೆ. ಇದು ರಾಜ್ಯಗಳ ಮೇಲೆ ಹೆಚ್ಚಿನ ಹಣಕಾಸು ಹೊರೆಯನ್ನು ಹೇರಲಿದ್ದು, ಇದು ಸಂವಿಧಾನದ ಆರ್ಟಿಕಲ್ 258 ಮತ್ತು 280ಗೆ ವಿರುದ್ಧವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಗ್ರಾಮ ಪಂಚಾಯತ್ಗಳಿಗೆ ಇದ್ದ ಅಧಿಕಾರವನ್ನು ಇದೀಗ ಕೇಂದ್ರ ಸರ್ಕಾರ ಕಿತ್ತು ಕೊಂಡಿದ್ದು, ಇದು ಒಕ್ಕೂಟ ವ್ಯವಸ್ಥೆಗೆ ಮತ್ತು ಸಂವಿಧಾನಕ್ಕೆ ವಿರುದ್ಧವಾಗಿದೆ. ಹೊಸ ಕಾಯ್ದೆಯನ್ನು ಜಾರಿಗೊಳಿಸದಿರುವಂತೆ ಕೋರಿ ಪ್ರಧಾನಿಯವರಿಗೆ ಡಿ.30ರಂದು ನಾನು ಪತ್ರ ಬರೆದಿದ್ದೇನೆ. ಹೊಸ ಕಾಯ್ದೆಯನ್ನು ರದ್ದುಪಡಿಸಬೇಕು. ನರೇಗಾ ಕಾಯ್ದೆ ಮತ್ತೆ ಜಾರಿಗೊಳಿಸಬೇಕು. ಮಹಿಳೆಯರು, ದಲಿತರ ಉದ್ಯೋಗದ ಹಕ್ಕನ್ನು ಪುನರ್ ಸ್ಥಾಪಿಸಬೇಕು. ಪಂಚಾಯತ್ಗಳ ಸ್ವಯಂ ಆಡಳಿತದ ಹಕ್ಕನ್ನು ಮರು ಸ್ಥಾಪಿಸಬೇಕು ಎಂದು ರಾಜ್ಯ ಸರ್ಕಾರ ಕೇಂದ್ರವನ್ನು ಒತ್ತಾಯಿಸಿದೆ ಎಂದರು.
ಹೊಸ ಬಿಲ್ ಮೂಲಕ ಗ್ರಾಮೀಣ ಜನರ ಜೀವನೋಪಾಯ ಕಸಿಯಲಾಗುತ್ತಿದೆ. ರಾಜ್ಯ ಸರ್ಕಾರದ ಜೊತೆ ಚರ್ಚೆ ಮಾಡದೆ, ರಾಜ್ಯಗಳ ಆಯವ್ಯಯದ ಮೇಲೆ ಹೆಚ್ಚಿನ ಹೊರೆಯನ್ನು ಸಂವಿಧಾನ ಬಾಹಿರವಾಗಿ ಹೇರಲಾಗುತ್ತಿದೆ ಎಂದರು.
ಹೊಸ ಕಾಯ್ದೆಯಿಂದ ನಿರುದ್ಯೋಗ ಹೆಚ್ಚಳ, ಉದ್ಯೋಗದಲ್ಲಿ ಮಹಿಳೆಯರ ಪಾಲುದಾರಿಕೆ ಇಳಿಕೆ, ದಲಿತ ಹಾಗೂ ಆದಿವಾಸಿ ಕುಟುಂಬಗಳ ಮೇಲೆ ಹೆಚ್ಚಿನ ಒತ್ತಡ ಸೃಷ್ಟಿ, ಗ್ರಾಮೀಣ ಜೀವನೋಪಾಯಗಳ ಕುಸಿತದಿಂದ ಗ್ರಾಮೀಣ ಬದುಕು ದುಸ್ತರಗೊಳ್ಳಲಿದೆ. ಪಂಚಾಯತ್ಗಳು ಕೇವಲ ಅನುಷ್ಠಾನ ಸಂಸ್ಥೆಗಳಾಗಿ ಕಾರ್ಯ ನಿರ್ವಹಿಸುವಂತಾಗುತ್ತದೆ. ಈ ಮೂಲಕ ಗುತ್ತಿಗೆದಾರರಿಗೆ ಹೆಚ್ಚಿನ ಅವಕಾಶ ಸೃಷ್ಟಿಸಲಾಗುತ್ತಿದೆ ಎಂದರು.
ಮನುಸ್ಮೃತಿ ಪ್ರಕಾರ ಮಹಿಳೆಯರು, ದಲಿತರು ಮತ್ತು ಶೂದ್ರರ ಕೈಯಲ್ಲಿ ಹಣ ಇರಬಾರದು
20 ವರ್ಷಗಳ ಹಿಂದೆ ಮನಮೋಹನ ಸಿಂಗ್ ಸರ್ಕಾರ ಕಾಯ್ದೆಯನ್ನು ಜಾರಿಗೊಳಿಸುವ ಸಂದರ್ಭದಲ್ಲೇ ಬಿಜೆಪಿ ಯೋಜನೆಯನ್ನು ವಿರೋಧಿಸಿತ್ತು. ಆಹಾರ ಭದ್ರತಾ ಕಾಯ್ದೆಯನ್ನು ಸಹ ಗೇಲಿ ಮಾಡಿತ್ತು. ಜನಪರವಾದ ಕಾನೂನುಗಳನ್ನು ನಾಶ ಮಾಡುವುದೇ ಬಿಜೆಪಿ ಕೆಲಸ.
ಮನುಸ್ಮೃತಿ ಪ್ರಕಾರ ಮಹಿಳೆಯರು, ದಲಿತರು ಮತ್ತು ಶೂದ್ರರ ಕೈಯಲ್ಲಿ ಹಣ ಇರಬಾರದು ಎಂದು ಹೇಳುತ್ತದೆ. ಅವರು ಸ್ವಾಭಿಮಾನದಿಂದ ಬದುಕಬಾರದು. ಅವರು ಪೂರ್ಣ ಸೇವಕರಾಗಿಯೇ ಇರಬೇಕು ಎಂದು ಹೇಳುತ್ತದೆ. ಇಂತಹ ಮನುಸ್ಮೃತಿಯಿಂದ ಪ್ರೇರಣೆ ಪಡೆದಿರುವ RSS ಬಿಜೆಪಿ ಸರ್ಕಾರಕ್ಕೆ ಮಾರ್ಗದರ್ಶಕವಾಗಿದೆ. ಮಹಾತ್ಮಾ ಗಾಂಧಿಯನ್ನು ಗೋಡ್ಸೆ ಮೊದಲ ಬಾರಿ ಕೊಂದು ಹಾಕಿದರೆ, ಇದೀಗ ನರೇಗಾ ಕಾಯ್ದೆಯಲ್ಲಿ ಇದ್ದ ಮಹಾತ್ಮಾ ಗಾಂಧಿ ಹೆಸರನ್ನು ತೆಗೆದು ಹಾಕುವ ಮೂಲಕ ಬಿಜೆಪಿ ಮತ್ತೆ ಅವರನ್ನು ಮತ್ತೆ ಮತ್ತೆ ಕೊಲ್ಲುವ ಕೆಲಸ ಮಾಡುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.
ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರಾದ ಪ್ರಿಯಾಂಕ್ ಖರ್ಗೆ, ಕೆ.ಎಚ್.ಮುನಿಯಪ್ಪ, ಚಲುವರಾಯ ಸ್ವಾಮಿ, ಲಕ್ಷ್ಮಿ ಹೆಬ್ಬಾಳ್ಕರ್, ಶರಣ ಪ್ರಕಾಶ್ ಪಾಟೀಲ್, ಮುಖ್ಯಮಂತ್ರಿ ಅವರ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್ ಉಪಸ್ಥಿತರಿದ್ದರು.
Key words: Modi government, rural economy, village, power, CM Siddaramaiah
The post ಹಳ್ಳಿ ಅಧಿಕಾರ ಕಸಿದುಕೊಂಡು ಗ್ರಾಮೀಣ ಆರ್ಥಿಕತೆ ನಾಶಕ್ಕೆ ಮುಂದಾದ ಮೋದಿ ಸರ್ಕಾರ- ಸಿಎಂ ಸಿದ್ದರಾಮಯ್ಯ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.
Previous Article
ಬಳ್ಳಾರಿ SP ಪವನ್ ನಜ್ಜೂರ್ ಆತ್ಮಹತ್ಯೆ ಯತ್ನ ವದಂತಿ: ಆಪ್ತರ ಸ್ಪಷ್ಟನೆ
Next Article
ಚುನಾವಣಾ ರಾಜಕೀಯಕ್ಕೆ ಎಸ್.ಎ ರಾಮದಾಸ್ ನಿವೃತ್ತಿ: ಈ ದಿಢೀರ್ ನಿರ್ಧಾರಕ್ಕೆ ಕಾರಣವೇನು? ಹೆಚ್.ಎ ವೆಂಕಟೇಶ್